ಡಾ.ಜಿ. ಪರಮೇಶ್ವರ್


ಈ  ಯೋಜನೆಯಡಿ ಒಟ್ಟು 136.26 ಕೋಟಿ ಪುಟಗಳ ಭೂ ದಾಖಲೆಗಳಿದ್ದು, ಈವರೆಗೆ 104.33 ಕೋಟಿ ಪುಟಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ. 

ಬೆಂಗಳೂರು: ರಾಜ್ಯದ ಭೂ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ಸಂರಕ್ಷಿಸಿ, ಮುಂದಿನ ಪೀಳಿಗೆಗೂ ಸುರಕ್ಷಿತವಾಗಿ ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ ಜಾರಿಗೊಳಿಸಿರುವ ‘ಭೂಸುರಕ್ಷಾ’ ಯೋಜನೆಗೆ ಹೆಚ್ಚಿನ ವೇಗ ನೀಡಲು ನಿರ್ಧರಿಸಿರುವುದಾಗಿ ಡಿಸಿಎಂ ಡಾ. ಜಿ. ಪರಮೇಶ್ವರ್ ಭಾನುವಾರ ತಿಳಿಸಿದ್ದಾರೆ.

ಈ  ಯೋಜನೆಯಡಿ ಒಟ್ಟು 136.26 ಕೋಟಿ ಪುಟಗಳ ಭೂ ದಾಖಲೆಗಳಿದ್ದು, ಈವರೆಗೆ 104.33 ಕೋಟಿ ಪುಟಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ. ಬಾಕಿ ಉಳಿದಿರುವ 31.92 ಕೋಟಿ ಪುಟಗಳ ಡಿಜಿಟಲೀಕರಣವನ್ನು ಮುಂದಿನ ಆರು ತಿಂಗಳೊಳಗೆ ಪೂರ್ಣಗೊಳಿಸುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. 

ಭೂ ದಾಖಲೆಗಳು ರೈತರ ಮತ್ತು ಭೂಮಾಲೀಕರ ಪಾಲಿಗೆ ಅತ್ಯಂತ ಮಹತ್ವದ ಆಸ್ತಿ. ಹಳೆಯ ಮೂಲ ದಾಖಲೆಗಳು ಹಾಳಾಗದಂತೆ ಸಂರಕ್ಷಿಸುವುದು, ಅಗತ್ಯವಿದ್ದಾಗ ಸುಲಭವಾಗಿ ಲಭ್ಯವಾಗುವಂತೆ ಮಾಡುವುದು ಹಾಗೂ ದಾಖಲೆಗಳ ಸುರಕ್ಷತೆಯನ್ನು ಖಾತರಿಪಡಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಈ ಮಹತ್ವದ ಕಾರ್ಯದಲ್ಲಿ ಯಾವುದೇ ವಿಳಂಬವಾಗದಂತೆ ಅಧಿಕಾರಿಗಳು ನಿಗದಿತ ಗುರಿಯಂತೆ ಕಾರ್ಯನಿರ್ವಹಿಸಬೇಕು ಎಂದು ಸ್ಪಷ್ಟಪಡಿಸಿರುವುದಾಗಿ ತಿಳಿಸಿದ್ದಾರೆ.

ನಿಗದಿತ ಅವಧಿಯಲ್ಲಿ ಯೋಜನೆಯನ್ನು ಪೂರ್ಣಗೊಳಿಸಲು ಕಂದಾಯ ಇಲಾಖೆಯಿಂದ ಅಗತ್ಯವಿರುವ ಎಲ್ಲಾ ನೆರವು ಒದಗಿಸಲಾಗುವುದು. ಹಿರಿಯ ಅಧಿಕಾರಿಗಳು ನಿರಂತರವಾಗಿ ಪ್ರಗತಿ ಪರಿಶೀಲಿಸಲಿದ್ದು, ನಾನೂ ಈ ಕಾರ್ಯದ ಮೇಲೆ ನಿಗಾ ವಹಿಸಲಿದ್ದೇನೆ. ತಂತ್ರಜ್ಞಾನದ ನೆರವಿನೊಂದಿಗೆ ಭೂ ದಾಖಲೆಗಳ ಸಂರಕ್ಷಣೆ ಮತ್ತು ಕಂದಾಯ ಸೇವೆಗಳನ್ನು ಇನ್ನಷ್ಟು ಸುಲಭಗೊಳಿಸುವುದು ನಮ್ಮ ಆದ್ಯತೆಯಾಗಿದೆ ಎಂದಿದ್ದಾರೆ.

ರಾಜ್ಯದಲ್ಲಿ ದರಖಾಸ್ತು ಪೋಡಿ ಪ್ರಕರಣಗಳ ವಿಲೇವಾರಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಕಂದಾಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ. ವಿವಿಧ ಹಂತಗಳಲ್ಲಿ ಬಾಕಿ ಉಳಿದಿರುವ 10.71 ಲಕ್ಷ ದರಖಾಸ್ತು ಪೋಡಿ ಪ್ರಕರಣಗಳನ್ನು ಒಂದು ವರ್ಷದೊಳಗೆ ಸಂಪೂರ್ಣವಾಗಿ ವಿಲೇವಾರಿ ಮಾಡುವ ಗುರಿ ನಿಗದಿಪಡಿಸಲಾಗಿದೆ.

ಇಂದಿನಿಂದ ಪ್ರತಿ ತಾಲ್ಲೂಕಿನಲ್ಲಿ ಪ್ರತಿದಿನ ಕನಿಷ್ಠ 15 ದರಖಾಸ್ತು ಪೋಡಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ, 15 ಪಹಣಿಗಳನ್ನು ಸೃಜಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದ್ದೇನೆ. ಈಗಾಗಲೇ ಖರೀದಿಸಿ ಒದಗಿಸಿರುವ ರೋವರ್‌ಗಳನ್ನು ಸಮರ್ಪಕವಾಗಿ ಬಳಸಿಕೊಂಡು ಪೋಡಿ ಕಾರ್ಯವನ್ನು ತ್ವರಿತಗೊಳಿಸಬೇಕು. ಈ ವಿಚಾರದಲ್ಲಿ ವಿಳಂಬ ಅಥವಾ ನಿರ್ಲಕ್ಷ್ಯಕ್ಕೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ವರ್ಷಗಳ ಕಾಲ ಬಾಕಿ ಉಳಿದಿರುವ ಪೋಡಿ ಸಮಸ್ಯೆಯಿಂದ ರೈತರು ಮತ್ತು ಭೂಮಾಲೀಕರು ಎದುರಿಸುತ್ತಿರುವ ತೊಂದರೆಗಳಿಗೆ ಪರಿಹಾರ ಕಲ್ಪಿಸುವುದು ನಮ್ಮ ಉದ್ದೇಶ. ನಿಗದಿತ ಕಾಲಮಿತಿಯಲ್ಲಿ ಎಲ್ಲಾ ಪ್ರಕರಣಗಳನ್ನು ವಿಲೇವಾರಿ ಮಾಡಿ, ಅರ್ಹ ಫಲಾನುಭವಿಗಳಿಗೆ ಭೂ ದಾಖಲೆಗಳನ್ನು ಒದಗಿಸುವ ನಿಟ್ಟಿನಲ್ಲಿ ಕಂದಾಯ ಇಲಾಖೆ ಕಾರ್ಯನಿರ್ವಹಿಸಲಿದೆ ಎಂದು ಪರಮೇಶ್ವರ್ ತಿಳಿಸಿದ್ದಾರೆ

#Karnataka #‘Bhoosuraksha’ project #Drgparameshwar #ಕರ್ನಾಟಕ #ಭೂಸುರಕ್ಷಾ ಯೋಜನೆ

Leave a Reply

Your email address will not be published. Required fields are marked *

  • Facebook
  • X (Twitter)
  • LinkedIn
  • More Networks
Copy link